(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 28. ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 5,188 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ ನಾಗರಾಜ್ ಅವರು ಹೇಳಿದ್ದಾರೆ.
ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎಸ್.ರುದ್ರೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪೌರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕೆ ಎರಡು ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ನಿವೇಶನ ಹೊಂದಿದ ಪೌರಕಾರ್ಮಿಕರಿಗೆ 7.50 ಲಕ್ಷ ರೂ.ಗಳ ನೆರವು ನೀಡಲಾಗುತ್ತಿದ್ದು, ಅವರೇ ಮನೆಯನ್ನು ನಿರ್ಮಿಸಿಕೊಳ್ಳಬೇಕಾಗಿದೆ. ಇನ್ನೊಂದು ಜಿ ಪ್ಲಸ್ 2 ಮಾದರಿಯಲ್ಲಿ ಸರ್ಕಾರವೇ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಿ ಪೌರಕಾರ್ಮಿಕರಿಗೆ ನೀಡಲಾಗುತ್ತದೆ. ಪೌರಕಾರ್ಮಿಕರಿಗಾಗಿ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಕಟ್ಟಡ ನಿರ್ಮಾಣದಲ್ಲಿ ಲೋಪ, ಕಳಪೆ ಕಂಡು ಬಂದಲ್ಲಿ ಸಂಬಂಧಿಸಿದ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.