ಎಸ್ಸಿ:ಪಿ, ಟಿಎಸ್ಪಿಓ ಅನುದಾನ ವೆಚ್ಚ ಮಾಡದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ➤ ಜಿ.ಪಂ ಸಿಇಓ ಡಾ. ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭ್ಯುದಯಕ್ಕಾಗಿ ವಿವಿಧ ಇಲಾಖೆಗಳಿಗೆ ಹಲವು ಯೋಜನೆಗಳಡಿ ಬಿಡುಗಡೆ ಮಾಡಲಾಗುವ ಅನುದಾನವನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ವೆಚ್ಚ ಮಾಡದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಬುಧವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶೇಷ ಘಟಕ ಮತ್ತು ಪರಿಶಿಷ್ಟ ವರ್ಗಗಳ ಉಪಯೋಗ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಏಳಿಗೆಗಾಗಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿದ ಅನುದಾನವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅನುದಾನವನ್ನು ವೆಚ್ಚ ಮಾಡಿ ಪ್ರಗತಿ ಸಾಧಿಸಬೇಕು, ಅರ್ಹ ಫಲಾನುಭವಿಗೆ ಅದರ ಲಾಭ ದೊರೆತಿರಬೇಕು, ಆದರೆ, ಇದೀಗ ಡಿಸೆಂಬರ್ ಮಾಹೆ ಮುಕ್ತಾಯವಾಗುತ್ತಿದ್ದರೂ ಕೆಲವು ಇಲಾಖೆಗಳಲ್ಲಿ ನಿರೀಕ್ಷಿತ ಪ್ರಮಾಣದ ಪ್ರಗತಿ ಕಂಡುಬಂದಿಲ್ಲ, ಆದ ಕಾರಣ ಶೇ. 70ಕ್ಕೂ ಕಡಿಮೆ ಪ್ರಗತಿ ಸಾಧಿಸಿದ ಇಲಾಖೆಗಳ ವಿರುದ್ಧ ಕಾಯ್ದೆಯನುಸಾರ ಕ್ರಮಕೈಗೊಳ್ಳುವಂತೆ ಅವರು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ ಅವರಿಗೆ ಸೂಚನೆ ನೀಡಿದರು. ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಫಲಾನುಭವಿಗಳ ಆಯ್ಕೆಯಾಗಬೇಕು, ಆಯ್ಕೆ ವಿಳಂಬಕ್ಕೆ ಆಸ್ಪದವಾಗದಂತೆ ಗಮನ ಹರಿಸಬೇಕು, ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸದ ಸಹಕಾರ ಇಲಾಖೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಮುಖ್ಯಸ್ಥರಿಗೆ ಕೂಡಲೇ ನೋಟೀಸ್ ನೀಡುವಂತೆ ಜಿಲ್ಲಾ ಪಂಚಾಯತ್ ಸಿಇಓ ಸೂಚಿಸಿದರು.

Also Read  ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮದಡಿ ಇನ್ನೂ ಅನುದಾನ ಬಿಡುಗಡೆಯಾಗಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ಸಂಬಂಧಿಸಿದ ನಿಗಮಗಳ ಎಂಡಿಯವರಿಂದ ಸ್ಪಷ್ಟೀಕರಣ ಪಡೆಯುವಂತೆಯೂ ಅವರು ಹೇಳಿದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಹಾನಗರ ಪಾಲಿಕೆಯ ಆಡಳಿತದ ಉಪ ಆಯುಕ್ತ  ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ

error: Content is protected !!
Scroll to Top