ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ ➤ ಜಿಲ್ಲಾಧಿಕಾರಿ ರವಿಕುಮಾರ್

dc ravikumar

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾಶವಿಲ್ಲ, ಮಾತ್ರವಲ್ಲ ಅದನ್ನು ಸಹಿಸಲು ಆಗದು. ಈ ರೀತಿ ಆದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಅವರು ಗುರುವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಗಳು ಸಾರಿಗೆ ಸೌಲಭ್ಯವನ್ನು ಫಲಾನುಭವಿಗಳಿಂದ ಆಪೇಕ್ಷಿಸುತ್ತಾರೆ ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರೊಬ್ಬರು ಸಭೆಯಲ್ಲಿ ತಿಳಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ಪಡೆದು ಅದನ್ನು ದುರುಪಯೋಗ ಪಡಿಸಿಕೊಂಡಲ್ಲಿ, ಈ ಬಗ್ಗೆ ತಮಗೆ ದೂರು ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು ಆ ಪ್ರಮಾಣ ಪತ್ರವನ್ನು ವಜಾ ಮಾಡುವದಲ್ಲದೇ ಸಂಬಂಧಿಸಿದವರ ವಿರುದ್ಧ ಅಗತ್ಯ ಕ್ರಮಗಳನ್ನು ಜರುಗಿಸುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ನಮ್ಮ ಕ್ಲಿನಿಕ್‍ ಗಳ ಸಿಬ್ಬಂದಿಗಳು, ಸ್ಟಾಫ್ ನರ್ಸ್, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಇತರೆ ನೇಮಕಾತಿಗಳನ್ನು ನೇರವಾಗಿ ರಾಜ್ಯ ಸರ್ಕಾರದಿಂದ ಆದ ಕಾರಣ ಜಿಲ್ಲಾ ಮಟ್ಟದಲ್ಲಿ ಆ ನೇಮಕಾತಿಗೆ ಅವಕಾಶವಿರಲಿಲ್ಲ, ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಪಾಲನಾ ವರದಿಯಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕೆ.ಎಚ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ಸೇರಿದಂತೆ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಸಭೆಯಲ್ಲಿದ್ದರು.

Also Read  ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್

error: Content is protected !!
Scroll to Top