ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5ರೊಳಗೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ

dc ravikumar

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ/ಮ್ಯಾನ್ಯು ವಲ್ ಸ್ಕ್ಯಾವೆಂಜರ್‍ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಮಂಗಳೂರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕಡ್ಡಾಯವಾಗಿ ಆಯಾ ಮಾಹೆಯ 5ರೊಳಗೆ ವೇತನ ಪಾವತಿ ಆಗಬೇಕು, ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ಉತ್ತಮ ಆರೋಗ್ಯದಿಂದಿರುವುದು ಅತಿ ಮುಖ್ಯ, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಜಿಲ್ಲೆಯಲ್ಲಿರುವ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಪ್ರತಿ ತಿಂಗಳು ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದುಡಿಯುವ ಎಲ್ಲಾ ಪೌರಕಾರ್ಮಿಕರಿಗೆ ಮೂಲಭೂತ ಸೌಕರ್ಯ, ಸ್ನಾನ ಗೃಹ, ಶೌಚಾಲಯ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ವಿಶ್ರಾಂತಿ ಕೊಠಡಿಗೆ ಬೇಕಾದ ಪೀಠೋಪಕರಣಗಳನ್ನು ಖರೀದಿಸಲು ನಗರೋತ್ಥಾನ-4 ಯೋಜನೆಯಡಿ ಅನುದಾನ ಮೀಸಲಿಡಲಾಗುವುದು ಎಂದು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ, ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕ ಪ್ರದೀಪ್ ಡಿ’ಸೋಜಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್, ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಆನಂದ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು, ಪೌರಕಾರ್ಮಿಕರು ಇದ್ದರು.

Also Read  ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ

error: Content is protected !!
Scroll to Top