(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದರು. ಅವರು ಶುಕ್ರವಾರದಂದು ನಗರದ ಕರಾವಳಿ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23ಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಲವಾರು ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಈ ರೀತಿಯ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುವ ಮೂಲಕ ಅವುಗಳನ್ನು ಉಳಿಸಿಕೊಳ್ಳಬಹುದಾಗಿದೆ. ಈ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಅಗತ್ಯ ನೆರವು ಹಾಗೂ ಸಹಕಾರವನ್ನು ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿಯವರು, ತಾವು ಕೂಡಾ ಹಲವಾರು ಗ್ರಾಮೀಣ ಕ್ರೀಡೆಗಳನ್ನು ಆಡುತ್ತಿದ್ದ ಬಗ್ಗೆ ನೆನಪು ಮಾಡಿಕೊಂಡರು. ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್, ಬಂಟ್ವಾಳದ ವಿಷ್ಣು ಹೆಬ್ಬಾರ್, ಮಂಗಳೂರು ದಕ್ಷಿಣದ ರವಿಶಂಕರ್, ಮಂಗಳೂರು ಉತ್ತರದ ಭರತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ತಾಲೂಕುಗಳ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು.