(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕಳೆದ ಹಲವಾರು ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕಲ್ಲಡ್ಕ ಪರಿಸರದಲ್ಲಿ ಮಂಗಳವಾರದಂದು ಸಂಜೆ ನಡೆದ ಗಲಭೆ ಹಿನ್ನೆಲೆಯಲ್ಲಿ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.13 ನೇ ಮಂಗಳವಾರ ಮಧ್ಯರಾತ್ರಿಯಿಂದ ಜೂ.14 ನೇ ಬುಧವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಪ್ರಸ್ತಾವನೆಯಂತೆ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜೂ.21 ರವೆರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಬುಧವಾರದಂದು ಆದೇಶಿಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಐದು ಅಥವಾ ಹೆಚ್ಚು ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.