(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ.
ಸಾಕು ಪ್ರಾಣಿಗಳ ಮಾರಾಟಗಾರರಿಗೆ ಕಡ್ಡಾಯವಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ನಗರದ ಬಹುತೇಕ ಸಾಕು ಪ್ರಾಣಿ ಮಾರಾಟಗಾರರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಸಂಸ್ಥೆಗಳು ಪಶುಸಂಗೋಪನೆ ಇಲಾಖೆ ಹಾಗೂ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ, ಪಶುಸಂಗೋಪನೆ ಇಲಾಖೆ ಹಾಗೂ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಅಧಿಕಾರಿಗಳ ನೇತೃತ್ವದಲ್ಲಿ ಏಕಕಾಲಕ್ಕೆ ನಗರದ ವಿವಿಧ ಭಾಗದಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಪಕ್ಷಿ ಮತ್ತು ಪ್ರಾಣಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ ಎನ್ನಲಾಗಿದೆ.