(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ‘ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ (ಪಿಟಿಸಿಎಲ್) ಕಾಯ್ದೆ-1978’ ಯಥಾವತ್ತಾಗಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರ ಭೂಮಿಯನ್ನು ರಕ್ಷಿಸಬೇಕು ಎಂದು ಭೂಮಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಪ್ಪ ಆಗ್ರಹಿಸಿದರು. ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ’ ಸಂಘಟನೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಧರಣಿಯ 13 ನೇ ದಿನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಹಿಂದೆ ದೇವರಾಜ ಅರಸು ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಈ ಕಾಯ್ದೆಯನ್ನು ಸರಿಯಾಗಿ ಅನುಷ್ಠಾನ ಮಾಡದೇ ಇರುವುದರಿಂದ ಕಾಯ್ದೆಯ ವಿರುದ್ಧ ಅನೇಕ ತೀರ್ಪುಗಳು ಹೊರಬಂದು ದಲಿತರು ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಪರಿಶಿಷ್ಟರಿಗೆ ಮಂಜೂರಾಗಿರುವ ಭೂಮಿಯನ್ನು ಕೆಲ ಸಚಿವರು, ಶಾಸಕರು ಬೇನಾಮಿ ಹೆಸರಿನಲ್ಲಿ ಖರೀದಿಸಿರುವುದರಿಂದ ಯಶಸ್ವಿ ಅನುಷ್ಠಾನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ಬಡ ದಲಿತರ ಭೂಮಿ ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.