ನ್ಯೂಸ್ ಕಡಬ) newskadaba.com. ಸುಳ್ಯ, ಜ. 21 ವಿಧಾನ ಸಭಾ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಉಂಟಾಗಿದೆ. ಸೋಲನ್ನೇ ಅರಿಯದ, ಆರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿರುವ ಎಸ್.ಅಂಗಾರ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ, ಪತ್ರೀ ಪಕ್ಷಕ್ಕೂ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವು ಕೂಡ ಬಹಳ ಮುಖ್ಯ. ಇದೀಗ ರಾಜಕೀಯ ವಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಒಟ್ಟು ಎಂಟು ವಿಧಾನಸಭಾ ಸ್ಥಾನಗಳಿರುವ ಈ ಜಿಲ್ಲೆ ಕೇಸರಿ ಕೋಟೆ. ರಾಜ್ಯದ ಜನರ ಚಿತ್ತವೆಲ್ಲ ಕರಾವಳಿ ಜಿಲ್ಲೆಯ ಮೇಲೆಯೇ ಇದೆ.
1972ರಿಂದ ಇಲ್ಲಿ ಪರಿಶಿಷ್ಟ ಜಾತಿಯವರಿಗೆ ಮಾತ್ರ ಸ್ಪರ್ಧೆಗೆ ಅವಕಾಶ ಇದೆ. 1994ರಿಂದ ಸುಳ್ಯ ಕ್ಷೇತ್ರವನ್ನು ಆಳುತ್ತಿರುವ ಬಿಜೆಪಿ ಪಕ್ಷಕ್ಕೆ ಎಸ್ ಅಂಗಾರ ಒಬ್ಬರೇ ನಾಯಕ. 1994, 1999, 2004, 2008, 2013, 2018 ಹೀಗೆ ಸತತ 6 ಚುನಾವಣೆಗಳಲ್ಲಿ ಬಿಜೆಪಿಯ ಸಚಿವ ಅಂಗಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು 2013ರಲ್ಲಿ ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಾಗ ಗೆದ್ದ ಏಕೈಕ ವ್ಯಕ್ತಿ ಎಂದರೆ ಅದು ಅಂಗಾರ. ಜಿಲ್ಲೆಯಲ್ಲಿ ಬಿಜೆಪಿಯ ಮಾನ ಉಳಿಸಿದ್ದು ಕೂಡ ಇವರೇ.
ತನ್ನ ಸುದೀರ್ಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿ ವಿಶ್ರಾಂತ ಜೀವನ ನಡೆಸಲಿದ್ದಾರಂತೆ. ಸತತ ಆರು ಬಾರಿ ಸುಳ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೂ ಕೂಡ ಗೆಲುವಿನ ಅಂತರ ಕಡಿಮೆಯಾಗುತ್ತಾ ಹೋಗುತ್ತಿದೆ. ಜೊತೆಗೆ ಜನಸಾಮಾನ್ಯ ಮಾತ್ರವಲ್ಲ ಸಂಘ ಪರಿವಾರ ಮತ್ತು ಬಿಜೆಪಿ ಪಾಳಯದಲ್ಲಿ ಕೂಡ ಈ ಬಾರಿ ಅಂಗಾರರನ್ನು ಬಿಟ್ಟು ಹೊಸ ಅಭ್ಯರ್ಥಿಯನ್ನು ಇಳಿಸುವ ಸಾಧ್ಯತೆ ಬಗ್ಗೆ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೀಗ ಅಂಗಾರರು ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಬಿಜೆಪಿ ಪಕ್ಷದಿಂದ ಕಣಕ್ಕಿಳಿಯಲು ಸಾಲು ಸಾಲು ಹೆಸರುಗಳು ಕೇಳಿಬರುತ್ತಿವೆ.