(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮುಂದೂಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.
ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಸಿದ್ಧಪಡಿಸಿರುವ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ ವರ್ಗಾವಣೆ ನಡೆಸಲು ಮುಂದಾಗಿರುವುದಕ್ಕೆ ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವ ಬಿ.ಸಿ.ನಾಗೇಶ್ ಸೂಚನೆ ಮೇರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಿಕ್ಷಕರ ಪರಿಷ್ಕೃತ ವರ್ಗಾವಣೆಯ ವೇಳಾಪಟ್ಟಿಯ ಪ್ರಕಾರ ಮಂಗಳವಾರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭಿಸಲಾಗಿತ್ತು. ಆದರೆ ಮೀಸಲಾತಿ ಕೋರಿ ಮೀಸಲಾತಿ ಪ್ರಮಾಣಪತ್ರ ಸಲ್ಲಿಸಿದ್ದರೂ ಅದನ್ನು ಪರಿಗಣಿಸಿಲ್ಲವೆಂದು ಶಿಕ್ಷಕರು ಆರೋಪಿಸಿ ಕೌನ್ಸೆಲಿಂಗ್ ಕೇಂದ್ರಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.