ಇಂದಿನಿಂದ ಫೆಬ್ರವರಿ 19ರ ವರೆಗೆ ಕಡಬದಲ್ಲಿ ದ್ವಾದಶ ಜ್ಯೋತಿರ್ಲಿಂಗ ದರ್ಶನ ➤ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೇತೃತ್ವ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಮಹಾ ಶಿವರಾತ್ರಿಯ ಪ್ರಯುಕ್ತ ಇಂದಿನಿಂದ ಫೆಬ್ರವರಿ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದ್ದಾರೆ.

ಅವರು ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಫೆಬ್ರವರಿ 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾಮಠದ ಮಠಾಧೀಶ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮಂಗಳೂರು ಶಾಖೆಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಶ್ವೇಶ್ವರೀಜೀ ಅವರು ಈಶ್ವರೀಯ ಸಂದೇಶ ನೀಡಲಿದ್ದಾರೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಮಾಜಿ ಸಚಿವ ಬಿ. ರಮಾನಾಥ ರೈ, ಕಡಬ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ. ಮಾಧವ ಆಚಾರ್ಯ, ವೈದ್ಯರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಇ.ಎಸ್ ವಾಸುದೇವ್ ಇಡ್ಯಾಡಿ, ಕಡಬ ಆರಕ್ಷಕ ಉಪನಿರೀಕ್ಷಕ ಹರೀಶ್ ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಧ್ಯಾತ್ಮಿಕ ಯಕ್ಷಗಾನ ತಾಳಮದ್ದಳೆ ಹಾಗೂ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು. ಹರಪನ ಹಳ್ಳಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಸುಮಗಲಾ ಅವರು ಮಾತನಾಡಿ 1937 ರಲ್ಲಿ ಸ್ಥಾಪನೆಯಾಗಿ ವಿಶ್ವಾದ್ಯಂತ 110 ದೇಶಗಳಲ್ಲಿ ತನ್ನ ಶಾಖೆಗಳನ್ನು ಹೊಂದಿರುವ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಸ್ವ ಪರಿವರ್ತನೆಯಿಂದ ವಿಶ್ವ ಪರಿವರ್ತನೆ ಎನ್ನುವ ಧ್ಯೇಯ ವಾಕ್ಯವನ್ನು ಮೈಗೂಡಿಸಿಕೊಂಡು ವಿಶ್ವದಲ್ಲಿ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿನಿಧಿ ಡಾ|ಮಂಜುನಾಥ್ ಉಪಸ್ಥಿತರಿದ್ದರು.

Also Read  ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

error: Content is protected !!
Scroll to Top