H3N2 ಹಾವಳಿ- ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ➤ ಸಚಿವ ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಎಚ್3 ಎನ್2 (H3N2) ವೈರಲ್ ಸೋಂಕಿನ ಹಿನ್ನೆಲೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸೋಂಕು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 26 ಮಂದಿಗೆ H3N2 ವೈರಲ್ ಸೋಂಕು ಕಾಣಿಸಿಕೊಂಡಿದೆ. ಸಾರ್ವಜನಿಕರು ಆತಂಕದಲ್ಲಿದ್ದು, ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿಯ ಜೊತೆ ಸಭೆ ನಡೆಸಲಾಗಿದೆ ಎಂದರು. ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಇತ್ತೀಚೆಗೆ ಮಾಸ್ಕ್ ಧರಿಸುವುದು ಕಡಿಮೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿಯೂ ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಎಲ್ಲ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಅಲ್ಲದೇ, ಇನ್ ಫ್ಲೂಯೆಂಜಾಗೆ ವ್ಯಾಕ್ಸಿನ್ ತೆಗೆದುಕೊಳ್ಳಬೇಕು. ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸರಕಾರದಿಂದಲೇ ವ್ಯಾಕ್ಸಿನ್ ನೀಡಲಾಗುತ್ತದೆ. ಎಲ್ಲಾ ಆಸ್ಪತ್ರೆಗಳ ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ವಿವರಿಸಿದರು. 15 ವರ್ಷ ಕೆಳಗಿನ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸುಲಭವಾಗಿ ಸೋಂಕು ಹರಡುತ್ತದೆ. ಗರ್ಭಿಣಿಯರಿಗೆ ಸೋಂಕು ತಗಲುವ ಸಾಧ್ಯತೆ ಇದೆ. ಹೀಗಾಗಿ ಇವರೆಲ್ಲ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಸಲಹೆ ನೀಡಿದರು. ಕೆಮ್ಮುವಾಗ, ಸೀನುವಾಗ ಮುಖ ಕವರ್ ಮಾಡಿಕೊಳ್ಳಬೇಕು. ಕೈಗಳನ್ನು ಆಗಾಗ ಸೋಪಿನಿಂದ ತೊಳೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

Also Read  ಕಡಬ: ತೀವ್ರ ತರದ ಜ್ವರಕ್ಕೆ ಮಹಿಳೆ ಬಲಿ

error: Content is protected !!
Scroll to Top