(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ವಿದ್ಯಾರ್ಥಿನಿಯೋರ್ವಳ ಮನೆಗೆ ಆಗಾಗ ಹೋಗುತ್ತಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರು ವಿವಿಯ ಪ್ರಾಧ್ಯಾಪಕರೊಬ್ಬರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಮಂಗಳೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ವೇದವ ಅವರು ವಿದ್ಯಾರ್ಥಿನಿಯೊಬ್ಬಳ ಜತೆ ನಿಕಟ ಸಂಬಂಧ ಹೊಂದಿದ್ದು, ಆಗಾಗ ಆಕೆಯ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. 2013ರ ಆಗಸ್ಟ್ 2ರಂದು ವಿದ್ಯಾರ್ಥಿನಿ ಒಬ್ಬಳೇ ಮನೆಯಲ್ಲಿದ್ದ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತದಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಘಟನೆಯನ್ನು ಯಾರಿಗೂ ಹೇಳದಂತೆಯೂ, ಹೇಳಿದರೆ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ಅವರ ಮೇಲೆ ಆರೋಪಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಮಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವೇದವ ಅವರನ್ನು ತಪ್ಪಿತಸ್ಥರೆಂದು ಹೇಳಿ, ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಡಾ. ವೇದವ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು, ವೇದವ ಅವರ ಅರ್ಜಿ ವಜಾ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2017ರ ಜೂನ್ 9ರ ಆದೇಶವನ್ನು ಬದಿಗೆ ಸರಿಸಲಾಗಿದೆ. ಅಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು 506ರ ಅಡಿ ದಾಖಲಾಗಿರುವ ಪ್ರಕರಣದಿಂದ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗಿದೆ ಎಂದು ಹೇಳಿದೆ.