(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯವು(ಇಡಿ) ಗುರುವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅವರನ್ನು 8 ಗಂಟೆಗಳ ಕಾಲ ತಿಹಾರ್ ಜೈಲಿನಲ್ಲಿ ಎರಡನೇ ಸುತ್ತಿನ ವಿಚಾರಣೆ ನಡೆಸಿ, ಬಳಿಕ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರು ಇಡಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುತ್ತಿಲ್ಲ ಮತ್ತು “ತನಿಖೆಗೆ ಸಹಕರಿಸುತ್ತಿಲ್ಲ” ಎಂದು ಕೇಂದ್ರ ತನಿಖಾ ಸಂಸ್ಥೆ ಆರೋಪಿಸಿದೆ. 2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಕಳೆದ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಲಾಗಿತ್ತು.