ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮಂಗಳೂರು ಕುಂಜತ್ ಬೈಲು ನಿವಾಸಿ ರಾಜ, ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ (36) ಎಂದು ಗುರುತಿಸಲಾಗಿದೆ. ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ಪ್ರಕರಣದ ವಿಚಾರಣಾ ಸಂದರ್ಭ ಹಾಜರಾಗದೇ 2017ರಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ ಪ್ರಕರಣ, ಕಾರಾಗೃಹದಲ್ಲಿ ನಡೆದ ಹಲ್ಲೆ ಪ್ರಕರಣ, ನ್ಯಾಯಾಲಯದ ಆವರಣದಲ್ಲಿ ನಡೆದ ಕೊಲೆ ಯತ್ನ, ಜೀವ ಬೆದರಿಕ ಪ್ರಕರಣಗಳಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಮಾನ್ಯ ನ್ಯಾಯಾಲಯವು ಎಲ್ ಪಿ ಸಿ ವಾರಂಟ್ ಹೊರಡಿಸಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಂದರ್ಭ  ಬೆಂಗಳೂರಿನಲ್ಲಿ ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ನಕಲಿ ದಾಖಲೆಯನ್ನು ಸೃಷ್ಠಿಸಿ, ಹೆಸರು ಮತ್ತು ವಿಳಾಸವನ್ನು ಬದಲಾಯಿಸಿ ಆಧಾರ್ ಕಾರ್ಡ್ ನ್ನು ಪಡೆದು ಈ ಮೂಲಕ ಸಿಮ್ ಕಾರ್ಡ್ ನ್ನು ಪಡೆದು ಉಪಯೋಗಿಸುತ್ತಿದ್ದನು. ಅಲ್ಲದೇ ಈತನು 2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯವರಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Also Read  ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ

error: Content is protected !!
Scroll to Top