(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಿರುವ ಬೆನ್ನಲ್ಲೇ, ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ‘ಶಾಲಾ ಶಿಕ್ಷಣ ಇಲಾಖೆ’ ಎಂದು ಮರುನಾಮಕರಣ ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯೊಂದನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಕಚೇರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ಕ್ಲಸ್ಟರ್ ಶಾಲೆಗಳು ಮತ್ತು ಕಚೇರಿಗಳ ನಾಮಫಲಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದ್ದಾರೆ. ಇಷ್ಟೇ ಅಲ್ಲದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಹುದ್ದೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿಯೂ ಮರುನಾಮಕರಣ ಮಾಡಲಾಗಿದೆ. ಇದಲ್ಲದೇ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಾಲಾ ಶಿಕ್ಷಣ ಎಂದು ಪದನಾಮೀಕರಿಸಿದೆ. ಶಾಲಾ ಶಿಕ್ಷಣ ಇಲಾಖೆ ಎಂದು ನೂತನವಾಗಿ ಪದನಾಮೀಕರಿಸಿದ ಪದನಾಮವನ್ನು ಸಂಬಂಧಿಸಿದ ಎಲ್ಲಾ ಕಚೇರಿ, ಶಾಲೆಗಳ ಎಲ್ಲಾ ನಾಮಫಲಕಗಳಲ್ಲಿ ಬರೆಸಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.