(ನ್ಯೂಸ್ ಕಡಬ)newskadaba.com ನವದೆಹಲಿ: ಮಾ.30 ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ನೀಡುವ ಹಾಗೂ ಕ್ರಿಪ್ಟೋ ಕರೆನ್ಸಿಗಳಲ್ಲಿ ಅಕ್ರಮ ವಹಿವಾಟು ನಡೆಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯವು 20 ಸಂಸ್ಥೆಗಳ ಮೇಲೆ ನಿಗಾ ವಹಿಸಿರುವುದಾಗಿ ವರದಿ ತಿಳಿಸಿದೆ.
ಹಣಕಾಸು ವರ್ಗಾವಣೆ ನಿಗ್ರಹ ಕಾಯ್ದೆ(ಪಿಎಂಎಲ್ ಎ)ಯಡಿ 20 ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ ಸಂಸ್ಥೆಗಳ ಕಾರ್ಯಚಟುವಟಿಕೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.
20 ಸಂಸ್ಥೆಗಳ ವಹಿವಾಟಿನ ವಿರುದ್ಧ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ. ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ 20 ಸಂಸ್ಥೆಗಳ ಕಾರ್ಯಚಟುವಟಿಕೆ ಮೇಲೆ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ರಾಜ್ಯದ ತನಿಖಾ ಸಂಸ್ಥೆಗಳು ಸೂಕ್ಷ್ಮ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.
.