(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.20. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಯ ಚುನಾವಣಾ ಚಾಣುಕ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ, ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ದೇವನಹಳ್ಳಿಯಲ್ಲಿ ಧೀರಜ್ ಮುನಿರಾಜು ಅಭ್ಯರ್ಥಿ ಪರವಾಗಿ ಅಮಿತ್ ಷಾ ರೋಡ್ ಶೋ ನಡೆಸಲಿದ್ದಾರೆ.
ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿರುವ ಅಮಿತ್ ಷಾ, ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಲಿದ್ದಾರೆ.
ಮಧ್ಯಾಹ್ನ 3.45ರಿಂದ ಸಂಜೆ 5.15ರವರೆಗೆ ದೇವನಹಳ್ಳಿಯ ಪ್ರಮುಖ ಪಟ್ಟಣಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ. ಬಳಿಕ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಷಾ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ನಾಯಕರ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಹುತೇಕ ಎಲ್ಲರೂ ಭಾಗವಹಿಸಲಿದ್ದಾರೆ.
ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ನಂತರ ಕೆಲವು ನಾಯಕರು ಪಕ್ಷ ಬಿಟ್ಟು ಹೋಗಿದ್ದಾರೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸೇರಿದಂತೆ ಅನೇಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಈ ಬೆಳವಣಿಗೆ ನಂತರ ಬಿಜೆಪಿಗೆ ಲಿಂಗಾಯತ ವಿರೋ ಹಣೆಪಟ್ಟಿಯನ್ನು ಅಂಟಿಸಲು ಕಾಂಗ್ರೆಸ್ ಶತ ಪ್ರಯತ್ನ ನಡೆಸಿದೆ. ಹೀಗಾಗಿ ಕೈಗೊಳ್ಳಬೇಕಾದ ರಣತಂತ್ರಗಳ ಬಗ್ಗೆ ಅಮಿತ್ ಷಾ ಸ್ಥಳೀಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.