(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಸದ್ಯ ಆರರಲ್ಲಿ ಬಿಜೆಪಿ ಮತ್ತು ಒಂದರಲ್ಲಷ್ಟೇ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬಂಟ್ವಾಳ, ಸುಳ್ಯ, ಮೂಡುಬಿದಿರೆ ಹಾಗೂ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದರೆ, ಮಂಗಳೂರಿನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಆರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ 15,246 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರುತ್ತಿದ್ದು, 6ನೇ ಸುತ್ತಿನ ವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ, 7ನೇ ಸುತ್ತಿನಲ್ಲಿ ಮೊದಲ ಬಾರಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ 92 ಮತಗಳ ಅಲ್ಪ ಮುನ್ನಡೆ ಬಿಟ್ಟುಕೊಟ್ಟರು. 8ನೇ ಸುತ್ತಿನಲ್ಲೂ ಪುತ್ತಿಲ ಮುನ್ನಡೆಯ ಅಂತರವನ್ನು 556 ಮತಗಳಿಗೆ, 9ನೇ ಸುತ್ತಿನಲ್ಲಿ 649 ಮತಗಳಿಗೆ ಏರಿಸಿಕೊಂಡಿದ್ದು, ಕುತೂಹಲ ಮೂಡಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.