ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು ಅದರಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಸೌದಿಅರೇಬಿಯಾದ ನ್ಯಾಯಾಲಯದಿಂದ 15  ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಅಲ್ಲಿಯೇ ಜೈಲು ಸೇವೆ ಅನುಭವಿಸುತ್ತಿರುವ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ್ ರವರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಎಚ್ಚರಿಕೆ ನೀಡಿದೆ. ಜೊತೆಗೆ ಘಟನೆಯ ಕುರಿತು ಸೂಕ್ತ ಮಾಹಿತಿಯನ್ನು ಒಳಗೊಂಡ ವರದಿಯನ್ನು ಫೇಸ್ ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ನೀಡಬೇಕು. ಸುಳ್ಳು ಪ್ರಕರಣದಲ್ಲಿ ಭಾರತೀಯ ಪ್ರಜೆಯು ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆ ಆತನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರಕಾರ ಅಗತ್ಯ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದೆ. ಅಲ್ಲದೇ ಮಂಗಳೂರು ಪೊಲೀಸರು ಸಹ  ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

Also Read  ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

error: Content is protected !!
Scroll to Top