(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಬಿಜೆಪಿ ಸರಕಾರ ಜಾರಿಗೊಳಿಸಿದ್ದ ವಿವಾದಿತ ಎಪಿಎಂಸಿ ಕಾಯ್ದೆಯ ರದ್ದತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಕುರಿತು ಗುರುವಾರದಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನೇ ಮರುಜಾರಿಗೊಳಿಸುವ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ತಿಳಿಸಿದರು. ಈ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ 1 ಲಕ್ಷ ರೈತ ಕುಟುಂಬಗಳಿಗೆ ಸಮಸ್ಯೆಯಾಗಿದೆ. ರಾಜ್ಯದಲ್ಲಿ ಮಾರುಕಟ್ಟೆ ಕೂಡಾ ಗಣನೀಯವಾಗಿ ಕಡಿಮೆಯಾಗಿದೆ. ತಿದ್ದುಪಡಿ ಕಾಯ್ದೆ ಜಾರಿ ನಂತರ ವ್ಯವಹಾರ 570 ಕೋಟಿಯಿಂದ 200 ಕೋಟಿಗೆ ಕುಸಿದಿದೆ ಎಂದು ತಿಳಿಸಿದರು.