ಕೋಮುರಾಜಕೀಯಕ್ಕೆ ಬಲಿಯಾದ 6 ಕುಟುಂಬಗಳಿಗೆ 25 ಲಕ್ಷ ರೂ.ಗಳ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 19. ಮತೀಯ ದ್ವೇಷದಿಂದ ಹತ್ಯೆಗೀಡಾದ ಆರು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

ಸುಳ್ಯದ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಮಂಗಳೂರಿನ ಸುರತ್ಕಲ್ ನ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್, ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ ಹಾಗೂ ನರಗುಂದದ ಶಮೀರ್ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ನುಡಿದರು. ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು. ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

Also Read  'ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ' ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ

error: Content is protected !!
Scroll to Top