(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಆರೋಗ್ಯ ವೃದ್ಧಿಗೆ ಯೋಗ ಅತ್ಯುತ್ತಮ ಮಾರ್ಗವಾಗಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟರು.
ಅವರು ಬುಧವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಮನಸ್ಸು, ಬುದ್ದಿಯನ್ನು ಸರಿದಾರಿಯಲ್ಲಿ ನಡೆಸಲು, ಆದ್ಯಾತ್ಮ ಮತ್ತು ಆರೋಗ್ಯಕ್ಕೂ ಯೋಗ ಪೂರಕವಾಗಿದೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಮೇಯರ್ ಜಯಾನಂದ ಅಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಹಾಗೂ ಎಸಿಪಿ ಗೀತಾ ಕುಲಕರ್ಣಿ ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಯೋಗ ಮಾಹಿತಿ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೂ ಸೇರಿದಂತೆ ಅಧಿಕಾರಿಗಳು, ಹೋಂಗಾರ್ಡ್, ಯೋಗ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯೋಗಾಸನ ಮಾಡಿದರು.