(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ.
ಭಾರೀ ಮಳೆಯಿಂದಾಗಿ ಕೃಷ್ಣೆ, ಭೀಮಾ, ವರದಾ, ದೂದ್ ಗಂಗಾ, ತುಂಗಾ, ಮಲಪ್ರಭಾ, ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿನ ಹಲವು ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಇಬ್ಬರು, ಹಾವೇರಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕೊಡಗಿನ ಭಾಗಮಂಡಲ, ಕುಕ್ಕೆ ಸುಬ್ರಹ್ಮಣದ ಸ್ನಾನಘಟ್ಟ ಮುಳುಗಡೆಯನ್ನು ಮಳೆಯಿಂದಾಗಿ ಉಂಟಾಗಿದೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಕೂಡ ಮುಳುಗಡೆಯಾಗುವ ಭೀತಿ ಎದುರಿಸುತ್ತಿದೆ.
