(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. 7.42 ಕೆ.ಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ.
ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ ವೇಳೆ ಓರ್ವನನ್ನು ಬಂಧನಕ್ಕೊಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ಮುಂದುವರೆದಿವೆ. ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
