(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ ಆರಂಭವಾಗಲಿದೆ. ಇದೆ ನೇಮಕಾತಿಗೆ ನ್ಯಾಯಾಲಯವು ಒಂದು ತಿಂಗಳಲ್ಲಿ ಅನುಮತಿ ನೀಡಿ ಆದೇಶ ಪ್ರಕಟಿಸುವ ಸಾಧ್ಯತೆಗಳಿವೆ. 20 ಸಾವಿರ ಶಿಕ್ಷಕರನ್ನು ನೇಮಕ ಮಾಡುವ ಕುರಿತು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದ ಅವರು, ಅನುಮತಿ ದೊರೆತಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ನೇಮಕಾತಿ ಕಾರ್ಯ ಪೂರ್ಣವಾಗಲಿದೆ ಎಂದರು.