(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಲ್ಪಸಂಖ್ಯಾತರ ಸಮುದಾಯದಿಂದ ಸಿಗುವ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಆದ್ದರಿಂದ ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ರಾಷ್ಟೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ರಿಂಚೆನ್ ಲಾಮೋ ಸೂಚಿಸಿದರು. ಅವರು ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರದ ಕೆಲವು ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಇದರಿಂದ ಜನಸಾಮಾನ್ಯರು ವಂಚಿತರಾಗಿದ್ದಾರೆ, ಅಂತಹ ಯೋಜನೆಗಳು ಜನರಿಗೆ ಯಾವುದೇ ತೊಂದರೆ ಇಲ್ಲದೇ ಸುಲಭವಾಗಿ ತಲುಪಿಸುವ ಜವಾಬ್ದಾರಿ ಸರ್ಕಾರದಾಗಿದೆ. ಅಧಿಕಾರಿಗಳು ಜನಸಾಮಾನ್ಯರು ನಡುವೆ ಹೋಗಿ ದಾಖಲೆ, ವಿಧಾನಗಳ ಬಗ್ಗೆ ತಿಳಿಸಬೇಕು. ಲಾಭಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು. ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿ ಸ್ಟಾರ್ ಮಾತನಾಡಿ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮಕ್ಕಳಿಗೆ ಹಾಸ್ಟೆಲ್‍ಗಳ ಕೊರತೆ ಇದೆ, ಹೆಚ್ಚುವರಿ ಹಾಸ್ಟೆಲ್‍ಗಳನ್ನು ಸ್ಥಾಪಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರದಿಂದ 1ರಿಂದ 8ನೇ ತರಗತಿ ಮಕ್ಕಳಿಗೆ ಸಿಗುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸಲಾಗಿದೆ, ಅದನ್ನು ಮತ್ತೆ ಪ್ರಾರಂಭಿಸಬೇಕು. 10ರಿಂದ 12ನೇ ತರಗತಿಯ ಮಕ್ಕಳಿಗೆ ಸಿಗುವ ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಯಶೋಧರ ಜೆ, ವಕ್ಫ್ ಅಧಿಕಾರಿ ಅಬೂಬಕ್ಕರ್, ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವೀಂದ್ರ ಹಾಗೂ ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.