(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ.
ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ ಸಂದರ್ಭ ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್ ಅಶೋಕ್, ಪಕ್ಷವು ದೊಡ್ಡ ಜವಾಬ್ದಾರಿಯನ್ನು ನನಗೆ ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳುತ್ತೇವೆ ಎಂದು ಹೇಳಿದರು.