(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.10. ಪುದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ ಆರೋಪಿಸಿದ್ದಾರೆ.
ಅವರು ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪುದು ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಒಪ್ಪಂದ ಮಾಡುವ ಮೂಲಕ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದರು. ಪುದು ಗ್ರಾಮ ಪಂಚಾಯತ್‌ಗೆ ಫೆ.18 ರಂದು ನಡೆಯುವ ಚುನಾವಣೆಯಲ್ಲಿ 28 ರಿಂದ 30 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯಲಿದೆ. ಸಚಿವ ಯು.ಟಿ.ಖಾದರ್ ಅವರು ಪುದು ಪಂಚಾಯತ್ ವ್ಯಾಪ್ತಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು. ಈ ಹಿಂದೆ 32 ಸದಸ್ಯ ಬಲವನ್ನು ಹೊಂದಿದ ಪುದು ಪಂಚಾಯತ್ ಈ ಬಾರಿ 2 ಸ್ಥಾನವನ್ನು ಹೆಚ್ಚಿಸಿಕೊಂಡಿದ್ದು, ಸದಸ್ಯರ ಸಂಖ್ಯೆ 34 ಕ್ಕೆ ಏರಿದೆ. ಎಲ್ಲ ಸ್ಥಾನಗಳಿಗೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದ್ದು, ಮತದಾರರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.