(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್ನ ಜೆಎನ್1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ಆರೋಗ್ಯ ಇಲಾಖೆ ತಿಳಿಸಿದೆ.