(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಭಾರತೀಯ ರೈಲ್ವೇಯು ರಾಜ್ಯದಲ್ಲಿ ರೈಲಿನ ಮೂಲಸೌಕರ್ಯವನ್ನು ನವೀಕರಿಸುವ ಸಲುವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ದಾಖಲೆಯ 7,524 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಿದ್ದು ಈ ಹಿನ್ನೆಲೆಯಲ್ಲಿ ಫೆಬ್ರವರಿ 26, 2024 ರಂದು ಮಧ್ಯಾಹ್ನ 12:30 ಗಂಟೆಗೆ ಮಾನ್ಯ ಭಾರತದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ ಸುಮಾರು 12 ಅಮೃತ ಭಾರತಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಫೆಬ್ರವರಿ 26, 2024ರಂದು ಮಧ್ಯಾಹ್ನ 12:30 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೌರವಾನ್ವಿತ ಪ್ರಧಾನ ಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣ ಸೇರಿದಂತೆ ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಬಿಎಸ್‌ಎಸ್ ಅಡಿಯಲ್ಲಿ ಬಂಟ್ವಾಳ ರೈಲು ನಿಲ್ದಾಣ ಹಾಗೂ ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ಶಂಕುಸ್ಥಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಬಜೆಕೆರೆ ಹಾಲ್ಟ್ ರೈಲ್ವೇ ನಿಲ್ದಾಣದಲ್ಲಿ ಈ ಕೆಲಸಗಳ ಶಿಲಾನ್ಯಾಸ ಕಾರ್ಯವು ನಡೆಯಲಿದೆ.
ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯರಾದ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ, ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ, ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಮಂಜುನಾಥ ಭಂಡಾರಿ, ಶ್ರೀ ಎಸ್.ಎಲ್. ಭೋಜೇಗೌಡ, ಶ್ರೀ ಬಿ.ಎಂ. ಫಾರೂಕ್, ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ, ಶ್ರೀ ಕೆ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ, ಐಎಎಸ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್ ಕೆ ಐಎಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ..ರಿಶ್ಯಂತ್ ಐಪಿಎಸ್, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಇಒ ಭವಾನಿ ಶಂಕರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಡಾ. ನಿಂಗಯ್ಯ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.