ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಸಿ.ಎಲ್. ಆನಂದ್ ಅವರು ಹೇಳಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಅರೋಗ್ಯ ದೃಷ್ಟಿಯಿಂದ ಪೋಲಿಯೊ ಲಸಿಕೆಯನ್ನು ಪಡೆಯುವುದು ಅಗತ್ಯ, ಪೋಲಿಯೊ ಲಸಿಕೆಯನ್ನು ತೆಗೆದುಕೊಳ್ಳಲು ಹಿಂಜರಿಯುವ ಪೋಷಕರಿಗೆ ಲಸಿಕೆಯ ಬಗ್ಗೆ ಮನವರಿಕೆ ಮಾಡಿ ಲಸಿಕೆ ತೆಗೆದುಕೊಳ್ಳುವಂತೆ ಮನವೊಲಿಸಬೇಕು ಎಂದರು. ಆಕರ್ಷಕ ಬ್ಯಾನರ್‍ ಗಳನ್ನು ಅಳವಡಿಸುವುದರ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಿಗೆ ಹೋಗಿ ಅನುಮತಿ ಪಡೆದು ಲಸಿಕೆಯನ್ನು ನೀಡುವಂತೆ ಸೂಚಿಸಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ರಾಜೇಶ್ ಬಿ.ವಿ ಮಾತನಾಡಿ ಕಳೆದ ಹತ್ತು ವರ್ಷಗಳಿಂದ ಭಾರತವು ಪೋಲಿಯೋದಿಂದ ಮುಕ್ತವಾಗಿದೆ. ಮುಂದಿನ ದಿನಗಳಲ್ಲಿಯೂ ಕೂಡ ಪೋಲಿಯೋ ಬಾರದೇ ಇರಲು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಾರ್ಚ್ 3 ರಿಂದ 6ರವರೆಗೆ ಬೂತ್‍ಗಳಲ್ಲಿ  ಹಾಗೂ ಮನೆ ಮನೆಗಳಿಗೆ ತೆರಳಿ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group