ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲಿಸುವಂತೆ ಅವರು ನಿರ್ದೇಶನ ನೀಡಿದರು.

ಜಿಲ್ಲೆಯ ಗಡಿಭಾಗಗಳಲ್ಲಿ ಮತ್ತು ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಬೇಕಿದೆ. ಜಿಲ್ಲೆಯಿಂದ ಆಗಮಿಸುವ ಹಾಗೂ ನಿರ್ಗಮಿಸುವ ವಾಹನಗಳನ್ನು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಣೆಗೆ ತಂಡಗಳನ್ನು ನಿಯೋಜನೆ ಮಾಡಬೇಕು. ಈ ತಂಡಗಳು ಪ್ರತಿದಿನ ಸ್ಥಳಗಳಲ್ಲಿ ತೆರಳಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಚೆಕ್ ಪೋಸ್ಟ್ ಗಳನ್ನು ಸುಭದ್ರವಾಗಿ ನಿರ್ಮಿಸಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಅಧಿಕಾರಿಗಳು ಸಮನ್ವಯದಿಂದ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗುವ ತಂಡಗಳು ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಹೊಣೆಗಾರಿಕೆಯಿಂದ ವಹಿಸಿದ ಕೆಲಸಗಳನ್ನು ನಿರ್ವಹಿಸಬೇಕು ಅವರು ಸೂಚನೆ ನೀಡಿದರು. ಸರಕಾರಿ, ಖಾಸಗಿ ಮತ್ತು ಸಹಕಾರಿ ಬ್ಯಾಂಕುಗಳಲ್ಲಿ ವ್ಯವಹಾರಗಳ ಮೇಲೆ ನಿಗಾ ವಹಿಸಬೇಕು. ಬ್ಯಾಂಕ್ ಅಧಿಕಾರಿಗಳನ್ನು ಮೈಕ್ರೋ ವೀಕ್ಷಕರನ್ನಾಗಿ ನೇಮಿಸಲಾಗುತ್ತದೆ ಎಂದು ಅವರು ಹೇಳಿದರು.

ದ.ಕ. ಲೋಕಸಭಾ ಕ್ಷೇತ್ರದಲ್ಲಿ 1876 ಮತಗಟ್ಟೆಗಳಿವೆ. ಈ ಪೈಕಿ 171 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ. ಚುನಾವಣೆಗೆ ಅಗತ್ಯವಿರುವ ಇವಿಎಂ ಮತ್ತು ವಿವಿಪ್ಯಾಟ್‍ಗಳು ಜಿಲ್ಲೆಯಲ್ಲಿವೆ ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿಗಳಾದ ಹರ್ಷವರ್ಧನ್, ಜುಬಿನ್ ಮಹಾಪಾತ್ರಾ, ತಹಶೀಲ್ದಾರರು, ವಿವಿಧ ಚುನಾವಣಾ ಸಮಿತಿ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Also Read  ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ

error: Content is protected !!
Scroll to Top