(ನ್ಯೂಸ್ ಕಡಬ) newskadaba.com ಕಡಬ, ಮಾ. 05. ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು.
ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ. 20ರಷ್ಟು, ಮತ್ತೊಬ್ಬಳಿಗೆ ಶೇ. 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ. 10ರಷ್ಟು ಸುಟ್ಟ ಗಾಯಗಳಾಗಿವೆ. ಗಾಯದ ತೀವ್ರತೆ ನೋಡಿಕೊಂಡು ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಒಂದು ವಾರಗಳ ಬಳಿಕ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗುತ್ತದೆ. ಮತ್ತೋರ್ವಳ ಗಾಯದ ವಾಸಿಯಾಗುವಿಕೆಯನ್ನು ಆಧರಿಸಿ ಪ್ಲಾಸ್ಟಿಕ್ ಸರ್ಜರಿ ಬೇಕೋ ಬೇಡವೋ ಎಂಬ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ. ಸಂತ್ರಸ್ತೆಯರಿಗೆ ಚಿಕಿತ್ಸೆಗೆ ತಕ್ಷಣ ತಲಾ ₹4 ಲಕ್ಷವನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುತ್ತೇನೆ ಎಂದರು.