(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ–ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು ಎನ್ನಲಾಗಿದೆ.
ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಿ.ಟಿ. ರವಿ, ಕೇಶವ ಪ್ರಸಾದ್, ಸುನೀಲ್ ವಲ್ಯಾಪುರೆ, ಡಾ.ಧನಂಜಯ ಸರ್ಜಿ ಕೂಡ ಧ್ವನಿಗೂಡಿಸಿದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದೆ. ಆದರೆ, ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಅಷ್ಟು ಹಣವನ್ನು ಪರಿಶಿಷ್ಟರಿಗೆ ಬಳಸಿದರೆ ಸಮುದಾಯದ ಶಿಕ್ಷಣ, ಭೂಮಿ ಖರೀದಿ, ಕೊಳವೆ ಬಾವಿ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಬಹುದು ಎಂದು ಪ್ರತಿಪಾದಿಸಿದರು ಎಂದು ವರದಿ ತಿಳಿಸಿದೆ.