(ನ್ಯೂಸ್ ಕಡಬ) newskadaba.com ಮಂಡ್ಯ, ಫೆ.18. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ, ರೈತ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ(69) ಹೃದಯಾಘಾತದಿಂದಾಗಿ ಇಂದು ರಾತ್ರಿ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ರೈತ ನಾಯಕರಾಗಿದ್ದ ಇವರು 2013ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ವೋದಯ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಗೊಂಡಿದ್ದರು. ಅವರು ಇಂದು ರಾತ್ರಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದುಬಿದ್ದರು. ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.