(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು 403 ಸಬ್ ಇನ್‌ಸ್ಪೆಕ್ಟರ್ ನೇಮಕಾತಿಗೆ ನಡೆದ ಪರೀಕ್ಷೆಯ ಫಲಿತಾಂಶವು ಇನ್ನಷ್ಟೇ ಪ್ರಕಟವಾಗಬೇಕಿದೆ. ಈ ಎಲ್ಲಾ ಹಂತದ ನೇಮಕಾತಿ ಪೂರ್ಣಗೊಳ್ಳುವ ಹೊತ್ತಿಗೆ 1,500 ಸಬ್ ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡಿಕೊಂಡಂತಾಗಲಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.