(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಬಾವಿ ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಲೈಸೆನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೆ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರಗಿಸುವುದು. ಅಧಿ ಸೂಚನೆ ಅನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಲೇಪಿದ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಭಾರತೀಯ ನ್ಯಾಯ ಸಹಿತ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸುವುದು. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್ ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಯನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರದಲ್ಲಿ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸುವುದು ಮತ್ತು ಈ ಬಗ್ಗೆ ಸೂಕ್ತ ಪ್ರಕಟಣೆಯನ್ನು ಹೊರಡಿಸುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿಓಪಿ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ದಿಗೆ ತೆಗೆದುಕೊಳ್ಳಲು ಕ್ರಮ ವಹಿಸಲಾಗುವುದು. ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.