(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21. ದೇಶದಾದ್ಯಂತ ಮಹಿಳೆಯರ ಮೇಲಿನ ದೌರ್ಜನ್ಯ ದಿನನಿತ್ಯ ಹೆಚ್ಚುತಲೇ ಇದೆ. ಇತ್ತೀಚೆಗೆ ತರಬೇತಿ ನಿರತ ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ನಡೆಸಿದ ಘಟನೆಗೆ ಸಂಬಂಧಿಸಿ, ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಪಡೆಯಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿದ ಅವರು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕಾನೂನು (ತಿದ್ದುಪಡಿ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಯಾರೇ ಆದರೂ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ಅಗೌರವ ತೋರಿದರೆ, ಕೆಟ್ಟದಾಗಿ ಮಾತನಾಡಿದರೆ ಮತ್ತು ಹಿಂಸಾಚಾರ ನಡೆಸಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಇದು ಜಾಮೀನುರಹಿತ ಅಪರಾಧ. 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು. ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡರೂ ಜಾಮೀನುರಹಿತ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.