ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಾಹಿತಿ ಬಂದ ತಕ್ಷಣವೇ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡಾ ಘಟನೆ ಸಂಬಂಧಿಸಿದಂತೆ ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Also Read  ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

 

 

 

error: Content is protected !!
Scroll to Top