(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿ ಪರಿಶೀಲಿಸಬೇಕು. ಈ ಸಂಬಂಧ ಸಭೆ ನಡೆಸಿ ನಡಾವಳಿಯನ್ನು ಸಕಾಲ ಪೋರ್ಟಲ್ ಗೆ ಸಲ್ಲಿಸಬೇಕು ಎಂದು ಅವರು ಹೇಳಿದರು. ಜನತಾದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆದ್ಯತೆಯಲ್ಲಿ ಸಂಬಂಧಿಸಿದ ಇಲಾಖೆಗಳು ಪರಿಶೀಲಿಸಿ ಇತ್ಯರ್ಥ ಪಡಿಸಬೇಕು. ಜಿಲ್ಲೆಯಲ್ಲಿ ಇದುವರೆಗೂ ನಡೆದ ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಿರುವ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕನ್ನಡ ಭಾಷಾ ಸಮಗ್ರ ವಿಧೇಯಕ ಆದೇಶದಂತೆ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಯಾಗಿರುವ ಬಗ್ಗೆ ಎಲ್ಲಾ ಇಲಾಖೆಗಳು ತಮ್ಮ ಅಧೀನ ಸಂಸ್ಥೆಗಳಲ್ಲಿ ಪರಿಶೀಲಿಸಿ ವರದಿ ನೀಡಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್ ನಂದನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.