ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (Any Where) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ.

Nk

ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6)ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಈಗ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

Also Read  ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು, ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ, ಉಪನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಉದಾಹರಣೆಗೆ: ಮಂಗಳೂರು ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಮಂಗಳೂರು ತಾಲೂಕು, ಮುಲ್ಕಿ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ವಿಟ್ಲ, ಸುಳ್ಯ, ಮೂಡಬಿದ್ರೆ ಉಪನೋಂದಣಿ ಕಚೇರಿಗಳ ಪೈಕಿ ಯಾವುದೇ ಉಪನೋಂದಣಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top