(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಕಾಂಗ್ರೆಸ್ ಸರ್ಕಾರವು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಇತರೆ ಪ್ರಕರಣಗಳಿಗೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ‘ರಾಜಭವನ ಚಲೋ’ ನಡೆಸಿದ್ದರು.