(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 4. ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಪಶ್ಚಿಮಬಂಗಾಳದ ಆರೋಗ್ಯ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಡಾ.ಸಂದೀಪ್ ಘೋಷ್ ಅವರನ್ನು ಬಂಧಿಸಿತ್ತು. ಆಸ್ಪತ್ರೆಯೊಳಗೆ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾದ 26 ದಿನಗಳ ಬಳಿಕ ಡಾ.ಸಂದೀಪ್ ಘೋಷ್ ಅವರನ್ನು ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಸೆಕ್ಯುರಿಟಿ ಗಾರ್ಡ್ ಮತ್ತು ಆಸ್ಪತ್ರೆಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರು ಕ್ರಿಮಿನಲ್ ವಿಚಾರಣೆ ಎದುರಿಸುತ್ತಿರುವುದರಿಂದ ತಕ್ಷಣಕ್ಕೆ ಅನ್ವಯವಾಗುವಂತೆ ಅಮಾನತುಗೊಳಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.