(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ ಪಾಟೀಲ್ ಹೇಳಿದರು.
ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನಲೆ ಇದೀಗ ಮಹಿಳಾ ವೈದ್ಯಕೀಯ ಸಿಬ್ಬಂದಿಯ ಭದ್ರತೆ ಬಗ್ಗೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಸೂಚನೆಯ ಭಾಗವಾಗಿ ಕ್ರಮಕ್ಕೆ ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆಯು, ಸಚಿವರ ನೇತೃತ್ವದಲ್ಲಿ ಈ ಹಿಂದೆ ಸಭೆ ನಡೆಸಿತ್ತು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಎರಡನೇ ಸಭೆಯಲ್ಲಿ, ಸುರಕ್ಷತೆಗೆ ಸರ್ಕಾರ ತೆಗೆದುಕೊಳ್ಳಬಹುದಾದ ವಿವಿಧ ಕ್ರಮಗಳನ್ನು ಅಧಿಕಾರಿಗಳು ವಿವರಿಸಿದರು. ‘ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚಿಸಲಾಗುವುದು ಎಂದು ಹೇಳಿದರು.