(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 2,000 ವೈದ್ಯರ ಕೊರತೆ ಇದ್ದು, ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ತುರ್ತು ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯವಾಗಿದೆ.
ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ವ್ಯಾಪ್ತಿಯನ್ನು ವ್ಯಾಖ್ಯಾನಿಸುವ ಸ್ಪಷ್ಟವಾದ ನೀತಿಗಳ ಕೊರತೆ ಕೂಡ ನೇಮಕಾತಿ ಪ್ರಕ್ರಿಯೆಗೆ ಸವಾಲೊಡ್ಡುತ್ತಿವೆ ಎಂದು ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಬೇಸರ ವ್ಯಕ್ತಪಡಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.