(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ ಕಾಲ ಕಠಿಣ ಸಂಶೋಧನೆ ಮತ್ತು ಸಮಾಲೋಚನೆ ನಡೆಸಿದೆ. ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ಅಮಿತ್ ಶಾ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಹಾಗೂ ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಮೊದಲಾದವರು ಸದಸ್ಯರಾಗಿದ್ದರು.