(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.
ಮಾಧ್ಯಮ ವರದಿಯ ಪ್ರಕಾರ, ಇಂತಹ ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜೊತೆ ಸಮಾಲೋಚನೆ ನಡೆಸದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಕೇಂದ್ರ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲೀ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ ಎಂದು ಹೇಳಿದ್ದಾರೆ. ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಬೇಕು. ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕು. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಮಾಡುತ್ತಿರುವ ಗಿಮಿಕ್ ಇದು ಎಂದು ಹೇಳಿರುವುದಾಗಿ ತಿಳಿದುಬಂದಿದೆ.