ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 25ರ ವರೆಗೆ ಪ್ರಥಮ ಡಿ.ಎಲ್.ಡಿ ಪರೀಕ್ಷೆಗಳು ನಡೆಯುತ್ತಿರುವ ನಗರದ ಸೈಂಟ್ ಆ್ಯನ್ಸ್ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಉಪ ಪೊಲೀಸು ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ದಾರ್ಥ್ ಗೋಯಲ್ ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.


ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ, ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಈ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Also Read  ಕರ್ನಾಟಕ ಋಣ ಪರಿಹಾರ ಕಾಯ್ದೆ ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್, ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

error: Content is protected !!
Scroll to Top