(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸದಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು ರಸ್ತೆಯಲ್ಲೇ ನಿಂತಿವೆ. ಕೆಎಸ್‌ಆರ್‌ಟಿಸಿ ಬಸ್ಸನ್ನು ಹೆದ್ದಾರಿಯಿಂದ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು 1 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಹೆದ್ದಾರಿಯ ಎರಡೂ ಬದಿಯಲ್ಲೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಚಾಲಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ವರದಿಯಾಗಿದೆ.